ಬೆಂಗಳೂರು ಬಿಗ್ ಬ್ರೇಕಿಂಗ್
ರಾಜ್ಯದಲ್ಲಿ ತಾರಕ್ಕೇರಿದ ಹಿಜಾಬ್ ( Hijab Row ) ಮತ್ತು ಕೇಸರಿ ಶಾಲು ವಿವಾದದಿಂದಾಗಿ, ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಇಂದಿನಿಂದ ಮೂರು ದಿನ 9, 10ನೇ ತರಗತಿಯ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದಿನಿಂದ 3 ದಿನ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ.
ಅಲ್ಲದೇ ಪಿಯು ಕಾಲೇಜು, ಪದವಿ ಕಾಲೇಜು, ಪಿಜಿ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪದ್ಮನಿ ಎಸ್ ಎನ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಅಲ್ಲಲ್ಲಿ ಬಿಗುವಿನ ವಾತಾವರಣವಿರುವುದನ್ನು ಗಮನಿಸಲಾಗಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಫೆಬ್ರವರಿ 2022ರ ದಿನಾಂಕ 9, 10 ಮತ್ತು 11ರವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 9, 10ನೇ ತರಗತಿ ಮತ್ತು ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಿಜಾಬ್ ವಿವಾದ ತಾರಕ್ಕೇರುತ್ತಿದ್ದಂತೆ, ರಾಜ್ಯಾಧ್ಯಂತ ನಾಳೆಯಿಂದ ಹೈಸ್ಕೂಲ್, ಕಾಲೇಜುಗಳಿಗೆ 3 ದಿನ ರಜೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಈ ಸಂಬಂಧ ಇದೀಗ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಕಾಲೇಜುಗಳಲ್ಲಿ ಬಿಗುವಿನ ವಾತಾವರಣವಿರುವುದನ್ನು ಗಮನಿಸಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಕಾರಣದಿಂದಾಗಿ ಫೆಬ್ರವರಿ 8, 9 ಮತ್ತು 10, 2022ರವರೆಗೆ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜು, ಡಿಪ್ಲೋಮಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ವರದಿ :- ಕ್ಯಾಮೆರಾ ಮೋಹಿನಿ (ಬೆಂಗಳೂರು ವರದಿಗಾರರು)