ಹೂಡೇಂ ಗ್ರಾಮಸ್ಥರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್!

0
378

ವಿಜಯನಗರ(ಹೊಸಪೇಟೆ):- ಜಾಗೃತಿ ಬೆಳಕು

ನ,19, ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮದಲ್ಲಿ ಶನಿವಾರ ಗ್ರಾಮವಾಸ್ತವ್ಯ ನಡೆಸಿದರು.

ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಗ್ರಾಮದೆಲ್ಲೆಡೆ ಸಂಚರಿಸಿ ರಸ್ತೆಗಳು, ಚರಂಡಿ, ಸ್ವಚ್ಛತೆ ಹಾಗೂ ಇನ್ನಿತರ ಮೂಲಸೌಕರ್ಯ ವ್ಯವಸ್ಥೆಯನ್ನು ಖುದ್ದಾಗಿ ಪರಿಶೀಲಿಸಿದರು.
ಹೂಡೇಂ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಅಡುಗೆ ಕೋಣೆ, ಶೌಚಾಲಯವನ್ನು ಪರಿಶೀಲಿಸಿದಾಗ ಎಲ್ಲವೂ ಉತ್ತಮವಾಗಿದೆ ಎಂದರು.
ಗ್ರಾಮವಾಸ್ತವ್ಯ ನಡೆಸುವುದಕ್ಕಿಂತ ಕೆಲವು ದಿನಗಳ ಮುಂಚೆಯೇ ಗ್ರಾಮಕ್ಕೆ ತಹಸೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಿ ಪಿಂಚಣಿ, ಪಹಣಿ, ಭೂ ದಾಖಲೆಗಳ ತಿದ್ದುಪಡಿ, ರೇಶನ್ ಕಾರ್ಡ್ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಬಗೆಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ತಿಳಿಸಿದರು.

50 ಜನ ವೃದ್ಧರು, ವಿಧವೆಯರು, ವಯಸ್ಕರ ಪಿಂಚಣಿ ಯೋಜನೆಗೆ ಆಯ್ಕೆ ಮಾಡಲಾಗಿದ್ದು, ಇದರಲ್ಲಿ 19 ಜನ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಪಿಂಚಣಿ ಪ್ರಮಾಣ ಪತ್ರವನ್ನು ನೀಡಲಾಯಿತು.
ಹೂಡೇಂ ಗ್ರಾಮದ ನಿವೇಶನ ರಹಿತ ಜನರು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಅವರಿಗೆ ಆಶ್ರಯ ಯೋಜನೆಯಡಿ ಅರ್ಹರಿಗೆ ಮನೆಗಳನ್ನು ಕಟ್ಟಿಸಿ ಕೊಡಲು ಸೂಕ್ತ ಕ್ರಮವಹಿಸಲಾವುಗುದು ಎಂದರು.
ಗ್ರಾಮಸ್ಥರು ಕುಡಿಯುವ ನೀರು, ಚರಂಡಿ, ವಿದ್ಯುತ್, ನಿವೇಶನ, ಬಸ್ ಸೌಕರ್ಯ, ಆಶ್ರಯ ಮನೆಗಳು, ರೇಶನ್ ಕಾರ್ಡ್, ಆಧಾರ್ ತಿದ್ದುಪಡಿ, ಪಟ್ಟಾ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಎದುರು ಪ್ರಸ್ತಾಪಿಸಿದರು.
ಗ್ರಾಮಸ್ಥರ ದೂರು-ದುಮ್ಮಾನಗಳನ್ನು ಸಮಾಧಾನದಿಂದ ಆಲಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಅನೇಕ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿದರು, ಕೆಲ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಹೂಡೇಂ ಗ್ರಾಮದಲ್ಲಿ ಬಹುತೇಕ ಅರ್ಜಿಗಳು ನಿವೇಶನಕ್ಕಾಗಿ ಸಲ್ಲಿಕೆಯಾಗಿವೆ. ಸಲ್ಲಿಕೆಯಾದ ಅರ್ಜಿಗಳಲ್ಲಿ ಶೇ.90ರಷ್ಟು ಅರ್ಜಿಗಳನ್ನು ನಮ್ಮಲ್ಲಿಯೇ ಪರಿಷ್ಕರಿಸಬಹುದಾಗಿದ್ದು, ಅವುಗಳನ್ನು ಶೀಘ್ರದಲ್ಲಿ ಪರಿಹರಿಸಲಾಗುವುದು. ಇನ್ನುಳಿದ ಅರ್ಜಿಗಳಲ್ಲಿ ಕೆಲವು ಕೋರ್ಟ್ ಮಟ್ಟದಲ್ಲಿ ಬಗೆಹರಿಸಬಹುದಾಗಿವೆ ಎಂದರು.

ಹೂಡೇಂ ಗ್ರಾಮದಲ್ಲಿ ಕೃಷಿ ಜಮೀನಿಗೆ ಹೋಗಲು ದಾರಿಯ ಸಮಸ್ಯೆ ಕುರಿತು ಗ್ರಾಮಸ್ಥರು ಮಾಡಿದ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಕಂದಾಯ ಅಧಿಕಾರಿಗಳಿಗೆ ಕೃಷಿ ಜಮೀನಿಗೆ ಹೋಗಲು ಎಲ್ಲೆಲ್ಲಿ ದಾರಿಯ ಸಮಸ್ಯೆ ಇದೆ ಎಂಬುದನ್ನು ಪರಿಶೀಲಿಸಿ, ಸರ್ಕಾರಿ ಜಾಗವಿದ್ದಲ್ಲಿ ದೂರವಾದರೂ ಸರಿಯೇ ಜಮೀನಿಗೆ ಹೋಗುವ ದಾರಿಯ ವ್ಯವಸ್ಥೆಯನ್ನು ಮಾಡಿ ಎಂದು ಈ ಸಂದರ್ಭದಲ್ಲಿ ಅವರು ಸೂಚಿಸಿದರು. ಇದಕ್ಕೆ ಸ್ಥಳೀಯ ಜನರು ಸಹಕಾರ ನೀಡಬೇಕು ಎಂದು ಕೋರಿದರು.
ಸ್ಮಶಾನಕ್ಕೆ ಹೋಗುವ ದಾರಿಯ ಸಮಸ್ಯೆ ಇದ್ದು, ಶೀಫ್ರದಲ್ಲಿ ಪರಿಹರಿಸಲಾಗುವುದು ಎಂದು ಹೇಳಿದರು.
ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಮಾತ್ರ ಗ್ರಾಮವನ್ನು ಸ್ವಚ್ಛವಾಗಿ ಮಾಡುವುದಲ್ಲದೇ, ನಿರಂತರವಾಗಿ ಗ್ರಾಮವನ್ನು ಸ್ವಚ್ಛವಾಗಿಡಬೇಕು ಎಂದು  ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಗಮನಿಸಬೇಕು ಎಂದು ತಿಳಿಸಿದರು.

ಸರ್ಕಾರಿ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸವನ್ನು ಮಾಡಬೇಕು. ತಪ್ಪಿದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಕೆರೆ ನಿರ್ಮಾಣ ಮಾಡಲು ಮನವಿ ಸಲ್ಲಿಸಿದ್ದು,  ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಅಧಿಕಾರಿಗಳೊಂದಿಗೆ ಅರಣ್ಯ ಜಾಗದಲ್ಲಿ ಕಾನೂನಿನ ಅಡಿಯಲ್ಲಿ ನಿರ್ಮಿಸಲು ಇರುವ ಸಾಧ್ಯತೆಗಳ ಕುರಿತು ಚರ್ಚಿಸಿ ಸೂಕ್ತ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನದ ನಿಮಿತ್ತ ವೇದಿಕೆ ಆವರಣದಲ್ಲಿ ಹಾಕಲಾಗಿದ್ದ ಆಯುಷ್ಯ ಆರೋಗ್ಯ ಮೇಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಅಭಿಯಾನ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕ್ಷಯರೋಗದ ಕುರಿತು ಜಾಗೃತಿ ಅಭಿಯಾನ,  ಕೃಷಿ-ತೋಟಗಾರಿಕೆ ಇಲಾಖೆಗಳ ವತಿಯಿಂದ ವಸ್ತು ಪ್ರದರ್ಶನದ ಸ್ಟಾಲ್‍ಗಳನ್ನು ಹಾಕಲಾಗಿತ್ತು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಸಿದ್ರಾಮೇಶ್ವರ, ಕೂಡ್ಲಿಗಿ ತಹಶೀಲ್ದಾರ್ ಟಿ.ಜಗದೇಶ್, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದುಗಲ್, ಡಿ.ಹೆಚ್.ಒ ಡಾ.ಸಲೀಂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ, ಡಿಡಿಎಲ್‍ಆರ್ ಕುಸುಮಾ, ತಾಪಂ ಇಒ ರವಿಕುಮಾರ್, ಹೂಡೇಂ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರಿಬಸಮ್ಮ, ಉಪಾಧ್ಯಕ್ಷ ರಾಘವೇಂದ್ರ, ಕಂದಾಯ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಇದ್ದರು.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here