ರೋಟರಿ ಕ್ಲಬ್ ವತಿಯಿಂದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ: ಮಕ್ಕಳ ಆರೋಗ್ಯ ರಕ್ಷಣೆಗೆ ಎಲ್ಲರ ಸಹಕಾರ ಅಗತ್ಯ
ಹೊಸಪೇಟೆ: ಪೋಲಿಯೋ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಹೊಸಪೇಟೆ ನಗರದ ರೋಟರಿ ಕ್ಯಾಂಪಸ್ನಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ ನಡೆಯಿತು.ರೋಟರಿ ಕ್ಲಬ್ ಅಧ್ಯಕ್ಷರಾದ ದಾದಾಪೀರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪೋಲಿಯೋ ಮುಕ್ತ ಭಾರತ ನಿರ್ಮಾಣವು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬ ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ, ಈ ರಾಷ್ಟ್ರೀಯ ಆರೋಗ್ಯ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಮಕ್ಕಳ ಆರೋಗ್ಯಕರ ಹಾಗೂ ಸುರಕ್ಷಿತ ಭವಿಷ್ಯಕ್ಕಾಗಿ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು” ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ನ ಸರ್ವ ಸದಸ್ಯರು, ಪಾಲಕರು ಹಾಗೂ ಪೋಷಕರು ಭಾಗವಹಿಸಿ, ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಸಮಾಜದ ಆರೋಗ್ಯ ರಕ್ಷಣೆಯಲ್ಲಿ ರೋಟರಿ ಕ್ಲಬ್ ನಿರಂತರವಾಗಿ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದನ್ನು ಈ ಕಾರ್ಯಕ್ರಮ ಮತ್ತೊಮ್ಮೆ ಸಾಬೀತುಪಡಿಸಿತು.

“ಪ್ರತಿ ಮಗುವಿಗೂ ಆರೋಗ್ಯಕರ ಭವಿಷ್ಯ – ಪೋಲಿಯೋ ಮುಕ್ತ ಭಾರತ ಹಾಗೂ ಪೋಲಿಯೋ ಮುಕ್ತ ವಿಶ್ವ ನಿರ್ಮಾಣಕ್ಕಾಗಿ ನಾವೆಲ್ಲರೂ ಒಂದಾಗೋಣ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ವರದಿ :ಮಹಮ್ಮದ್ ಗೌಸ್
